ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿ! | ಜನತಾ ನ್ಯೂಸ್
ಹುಬ್ಬಳ್ಳಿ : ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರನೂ ಆಗಿರುವ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗದಿಯಾಗಿದೆ.
ಜುಲೈ 30 ರಂದು ಶುಕ್ರವಾರ ಬೆಳಗ್ಗೆ 9 ಘಂಟೆಗೆ ಹುಬ್ಬಳ್ಳಿಯ ಗೋಕುಲ್ ಗಾರ್ಡನ್ನಲ್ಲಿ ನಡೆಯಲಿರುವ ಸಭೆಯಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಶ್ರೀ ಸಿದ್ದರಾಮಯ್ಯ ಕೂಡ ಉಪಸ್ಥಿತರಿರಲಿದ್ದಾರೆ ಎಂದು ಕೆಪಿಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಇತರ ನಾಯಕರ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ಗೆ ಸೇರ್ಪಡೆ ಆಗಲಿದ್ದಾರೆ.
ಮಧು ಬಂಗಾರಪ್ಪ ಅವರ ಜತೆ ಇನ್ನೂ ಹಲವು ನಾಯಕರು ಕೈ ಹಿಡಿಯಲಿದ್ದಾರೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ಜೆಡಿಎಸ್ ಅಧ್ಯಕ್ಷರಾದ ಕಿರಣ್ ಹಿರೇಮಠ, ಭೈರಿದೇವರಕೊಪ್ಪ ಗ್ರಾಮದ ಹಿರಿಯರು ಹಾಗೂ ಪ್ರಭಾವಿ ಜೆಡಿಎಸ್ ಮುಖಂಡ ಬಸವರಾಜ್ ಮಾಯಕರ್ (ಬೆಲ್ಲದ) ಇವರ ನೇತೃತ್ವದಲ್ಲಿ ನೂರಾರು ಜಾತ್ಯತೀತ ಜನತಾದಳದ ಕಾರ್ಯಕರ್ತರೂ ಅದೇ ವೇದಿಕೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಜತ್ ಉಳ್ಳಾಗಡ್ಡಿಮಠ ತಿಳಿಸಿದ್ದಾರೆ.