ಬೆಳ್ಳಂಬೆಳಗ್ಗೆ ರಸ್ತೆಗೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯ | Janata news
ಮಂಗಳೂರು : ಬೆಳ್ಳಂಬೆಳಗ್ಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ಗ್ಯಾಸ್ ಟ್ಯಾಂಕರ್ ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ರಸ್ತೆಯಲ್ಲಿ ಪಲ್ಟಿಯಾಗಿದೆ. ಇದರಿಂದ ಅನಿಲ ಸೋರಿಗೆ ಉಂಟಾಗುವ ಸಾಧ್ಯತೆಗಳಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಬೆಂಗಳೂರು - ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಘಟನಾ ಸ್ಥಳಕ್ಕೆ ಧಾವಿಸಿದ ತಾಂತ್ರಿಕ ತಜ್ಞರ ತಂಡ, ಟ್ಯಾಂಕರ್ನಿಂದ ಲೀಕೇಜ್ ಆಗ್ತಿಲ್ಲ ಎಂದು ಖಚಿತಪಡಿಸಿದ್ದಾರೆ. ಹಾಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಈ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದು, ವಾಹನ ಸಂಚಾರಕ್ಕೆ ಅನ್ಯ ಮಾರ್ಗ ಕಲ್ಪಿಸಿದ್ದಾರೆ.