ಇಶಾ ಫೌಂಡೇಶನ್ ಆದಿಯೋಗಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೈಕೋರ್ಟ್ ಅನುಮತಿ! | JANATA NEWS
ಚಿಕ್ಕಬಳ್ಳಾಪುರ : ಇಶಾ ಫೌಂಡೇಷನ್ ಸ್ಥಾಪಿಸಿರುವ ಆದಿಯೋಗಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.
ಜನವರಿ 15 ಭಾನುವಾರದಂದು ಇಶಾ ಫೌಂಡೇಶನ್ ವತಿಯಿಂದ ನಡೆಯಲಿರುವ ಆದಿಯೋಗಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಆದ್ರೆ, ಉಳಿದಂತೆ ಕಾಮಗಾರಿ ನಡೆಸದೇ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸಿದೆ.
ಜ.15 ಸಂಕ್ರಾಂತಿಯಂದು ನಿಗದಿಯಾದ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ, ಸಿಎಂ ಆಗಮಿಸುತ್ತಿದ್ದಾರೆ. ಪಿಐಎಲ್ ದಾಖಲಿಸುವ ಮುನ್ನವೇ ಈ ಕಾರ್ಯಕ್ರಮ ನಿಗದಿಯಾಗಿದೆ. ಹೀಗಾಗಿ ಕಾರ್ಯಕ್ರಮ ಆಯೋಜನೆಗೆ ಅನುಮತಿ ನೀಡಬೇಕು ಎಂದು ಇಶಾ ಫೌಂಡೇಶನ್ ಮನವಿ ಮಾಡಿತ್ತು.
ಈ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ಮರಗಳನ್ನು ಕಡಿಯಬಾರದು, ತೀರಾ ಅಗತ್ಯವಾಗಿರುವ ವ್ಯವಸ್ಥೆ ಮಾತ್ರ ಮಾಡಬೇಕು. ಉಳಿದಂತೆ ಯಥಾಸ್ಥಿತಿ ಮುಂದುವರಿಯಬೇಕು ಎಂದು ಷರತ್ತು ವಿಧಿಸಿ ಒಂದು ದಿನ ಮಟ್ಟಿಗೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಿದೆ.
ಯಾವುದೇ ಕಾಮಗಾರಿ ನಡೆಸದಂತೆ ಈ ಹಿಂದೆ ನೀಡಿದ್ದ ಯತಾಸ್ಥಿತಿ ಮುಂದುವರೆಯಲಿದೆ ಎಂದು ತಿಳಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್ ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಚಿಕ್ಕಬಳ್ಳಾಪುರದಲ್ಲಿ ಇಶಾ ಫೌಂಡೇಶನ್ ವತಿಯಿಂದ ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ, ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿತ್ತು. ಸರ್ಕಾರ ಮತ್ತು ಇಶಾ ಯೋಗ ಕೇಂದ್ರ ಸೇರಿ 16 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಆದಿಯೋಗಿ ಪ್ರತಿಮೆ ಸ್ಥಾಪನೆ ಸ್ಥಳವು ಪರಿಸರ ಸೂಕ್ಷ್ಮ ವಲಯವಾಗಿದ್ದು, ಅದನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುವುದು ಸರಿಯಲ್ಲ ಎಂದು ಅರ್ಜಿದಾರರ ಪರ ವಕೀಲ ಎಂ. ಶಿವಪ್ರಕಾಶ್ ಕೋರ್ಟ್ ಮೊರೆಹೋಗಿದ್ದರು.
ಆದಿಯೋಗಿ ಪ್ರತಿಮೆ ಸ್ಥಾಪನೆಗಾಗಿ ಸರ್ಕಾರ ಕಾನೂನುಬಾಹಿರವಾಗಿ ಜಮೀನು ಮಂಜೂರು ಮಾಡಿದೆ. ನಂದಿ ಬೆಟ್ಟಕ್ಕೆ ಐತಿಹಾಸಿಕ ಮಹತ್ವವಿದೆ ಎಂದು ವಾದ ಮಂಡಿಸಲಾಗಿದೆ. ಪರಿಸರದ ಮೇಲೆ ಪರಿಣಾಮ ಬೀರಬಹುದೆಂಬುದನ್ನು ಒಪ್ಪಬಹುದು ಎಂದು ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಲು ಅವಕಾಶ ನೀಡಿದ ಹೈಕೋರ್ಟ್, ಯಥಾಸ್ಥಿತಿಗೆ ಆದೇಶಿಸಿತ್ತು.